ಬೆಳಗಾವಿ ಪಾಲಿಕೆ ಚುನಾವಣೆಗೆ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ‌ 

ಬೆಳಗಾವಿ ಪಾಲಿಕೆ ಚುನಾವಣೆಗೆ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ‌ 
ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇವಿಎಂ‌, ಚುನಾವಣಾ ಸಿಬ್ಬಂದಿ, ತರಬೇತಿ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವಿವರಿಸಿದರು.
ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯುಕ್ತ ಡಾ. ಬಿ.ಬಸವರಾಜು ಅಧ್ಯಕ್ಷತೆಯಲ್ಲಿ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ(ಆ.26) ನಡೆದ ಜಿಲ್ಲಾ ಚುನಾವಣಾಧಿಕಾರಿ, ಪೊಲೀಸ್ ಆಯುಕ್ತರು ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು, ಸಾಮಾನ್ಯ ವೀಕ್ಷಕರು ಮತ್ತು ಚುನಾವಣಾ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಒಟ್ಟು 4,31,383 ಮತದಾರರಿದ್ದು, 13 ಉಪ ಮತಗಟ್ಟೆಗಳು ಸೇರಿದಂತೆ ಒಟ್ಟಾರೆ 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ನಗರದ ಬಿ.ಕೆ.ಮಾಡೆಲ್ ಹೈಸ್ಕೂಲಿನಲ್ಲಿ ಮಸ್ಟರಿಂಗ್  ಹಾಗೂ ಡಿಮಸ್ಟ್ ರಿಂಗ್ ನಡೆಯಲಿದೆ. ಪ್ರತಿಯೊಂದು ಮತ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಾರ ವೈದ್ಯಕೀಯ ತಂಡಗಳನ್ನು ಕೂಡ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.
 ನಾಮಪತ್ರ ವಾಪಸ್ ಪಡೆಯಲು ಆ.26 ಕಡೆಯ ದಿನವಾಗಿದೆ. ಈ ಪ್ರಕ್ರಿಯೆ ಬಳಿಕ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.
ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಪ್ರಚಾರ ಕಾರ್ಯಕ್ಕೆ ಅನುಮತಿ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಹಾಗೂ ಚುನಾವಣಾ ಆಯೋಗದ ನಿರ್ದೇಶನಗಳ ಪಾಲನೆಗೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ವಿವರಿಸಿದರು.
ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ‌ಚೆಕ್ ಪೋಸ್ಟ್ ಹಾಗೂ ಕಂಟ್ರೋಲ್ ರೂಮ್ ಗಳನ್ನು ಆರಂಭಿಸಲಾಗಿದೆ ಎಂದು‌ ಅಬಕಾರಿ ಇಲಾಖೆಯ ಉಪ ಆಯುಕ್ತ ಜಯರಾಮೇಗೌಡ ವಿವರಿಸಿದರು.
ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಅವರು, ಪಾಲಿಕೆಯ ಚುನಾವಣೆಯ ಹಿನ್ನೆಲೆಯಲ್ಲಿ ತೆಗೆದುಕೊಳ್ಳಲಾಗಿರುವ ಭದ್ರತೆಯ ಕುರಿತು ಮಾಹಿತಿಯನ್ನು ನೀಡಿದರು.
ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ‌ಚುನಾವಣಾ ಆಯೋಗದ ಅಧ್ಯಕ್ಷ ಬಿ.ಬಸವರಾಜು,  ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯನ್ನು ಪಾರದರ್ಶಕ, ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದು ನಮ್ಮ ಜವಾಬ್ದಾರಿ. ಆದ್ದರಿಂದ ನ್ಯಾಯಯುತ ಚುನಾವಣೆ ನಡೆಸಲು ಎಲ್ಲರೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಹಣಬಲ, ತೋಳ್ಬಲಕ್ಕೆ ಆಸ್ಪದ ನೀಡದೇ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆಯ ಆಯುಕ್ತ ಡಾ.ಪ್ರವೀಣ ಬಾಗೇವಾಡಿ, ಚುನಾವಣಾ ವೀಕ್ಷಕರಾದ ಗೀತಾ ಕೌಲಗಿ, ಶಿವನಗೌಡ ಪಾಟೀಲ,  ಇವಿಎಂ ನೋಡಲ್ ಅಧಿಕಾರಿ ಬಿ.ಕೆ.ಗೌರಿಶಂಕರ್, ಎಂಸಿಸಿ ನೋಡಲ್ ಅಧಿಕಾರಿ ಮೋಹನ ಶಿವಣ್ಣವರ, ಚುನಾವಣಾ ತರಬೇತುದಾರ ಎನ್.ವಿ.ಶಿರಗಾಂವಕರ, ಮತದಾನ ಹಾಗೂ ಮತ ಎಣಿಕೆ ಕೇಂದ್ರದ ನೋಡಲ್ ಅಧಿಕಾರಿ ಲಕ್ಷ್ಮೀ ನಿಪ್ಪಾಣಿಕರ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ವಿವಿಧ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.