ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಎಂ ಬಿ ಪಾಟೀಲ

ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಎಂ ಬಿ ಪಾಟೀಲ

 

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನೇಪಥ್ಯಕ್ಕೆ ಸರಿದಂತಿದ್ದ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಬಗ್ಗೆ ಮಾಜಿ ಸಚಿವ ಎಂ.ಬಿ.ಪಾಟೀಲ ಮತ್ತೆ ಪ್ರಸ್ತಾಪಿಸಿದ್ದು, ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಪೀಠದವರೂ ಸೇರದಂತೆ ಎಲ್ಲರೂ ಸೇರಿ ಬಸವ ಧರ್ಮದಲ್ಲಿ ಒಂದಾಗಬೇಕು. ಪ್ರತ್ಯೇಕ ಲಿಂಗಾಯತ ಧರ್ಮ ಆದರೆ ನಮಗೆಲ್ಲರಿಗೂ ಸೌಲಭ್ಯ ಸಿಗುತ್ತದೆ. ಮುಸ್ಲಿಂ, ಜೈನರ ಮಾದರಿಯಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ದೊರೆಯುತ್ತದೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಕಾರಣವಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ ಅವರು, ಇದೀಗ ಪಂಚಮಸಾಲಿಗರು ಮೀಸಲಾತಿಗೆ ಹೋರಾಟ ಮಾಡುತ್ತಿದ್ದಾರೆ. ಪ್ರತ್ಯೇಕ ಧರ್ಮ ಆದರೆ ಅವರಿಗೂ ಮೀಸಲಾತಿ ಸಿಗುತ್ತದೆ ಎಂದು ತಿಳಿಸಿದರು.

ಈ ಮಧ್ಯೆ, ಎಂ.ಬಿ.ಪಾಟೀಲ್‌ ಅವರ ಹೇಳಿಕೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ. ಈ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.