ವಿಧಾನ ಪರಿಷತ್ ಚುನಾವಣೆ; ಬೆಳಗಾವಿಯಲ್ಲಿ ಕಾಂಗ್ರೆಸ್ ಗೆ ತಲೆನೋವಾದ ಹೆಚ್ಚುತ್ತಿರುವ ಆಕಾಂಕ್ಷಿಗಳ ಸಂಖ್ಯೆ  

ವಿಧಾನ ಪರಿಷತ್ ಚುನಾವಣೆ; ಬೆಳಗಾವಿಯಲ್ಲಿ ಕಾಂಗ್ರೆಸ್ ಗೆ ತಲೆನೋವಾದ ಹೆಚ್ಚುತ್ತಿರುವ ಆಕಾಂಕ್ಷಿಗಳ ಸಂಖ್ಯೆ   

 

ಬೆಳಗಾವಿ: ಬರುವ ಡಿಸೆಂಬರ್ ನಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ ಮತ್ತು ವಿವೇಕರಾವ ಪಾಟೀಲ ಅವರ ಅವಧಿ ಮುಗಿಯುತ್ತಿದ್ದು, ಖಾಲಿಯಾಗುವ ಕ್ಷೇತ್ರಗಳಿಗೆ ಸ್ಪರ್ಧಿಸಲು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಪಟ್ಟಿ ಬೆಳೆಯುತ್ತ ಸಾಗಿದೆ. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಎರಡು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.

 

ಇದುವರೆಗೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಮಾಜಿ ಸಚಿವ ವೀರಕುಮಾರ ಪಾಟೀಲ ಹಾಗೂ ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಕಾಂಗ್ರೆಸ್ಸಿನ ಐವರು ಹುರಿಯಾಳುಗಳು ಟಿಕೆಟ್ ಕೋರಿ ಪಕ್ಷದ ಕದ ತಟ್ಟಿದ್ದಾರೆ. ಈ ಪಟ್ಟಿ ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳೆಯುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಬಿಜೆಪಿಯಲ್ಲಿ ಟಿಕೆಟ್ ವಿಷಯಕ್ಕೆ ಸಂಬಂಧಪಟ್ಟಂತೆ ಇದುವರೆಗೆ ಯಾವುದೇ ರೀತಿಯ ಗೊಂದಲ ಕಂಡು ಬಂದಿಲ್ಲ.

 

ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಜಿಲ್ಲೆಯ 18 ಶಾಸಕರು ಮತ್ತು ಇಬ್ಬರು ಸಂಸದರು ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಹೊಂದಿರುತ್ತಾರೆ. ಜಿಲ್ಲೆಯಲ್ಲಿ ಒಟ್ಟು ಸುಮಾರು 14,000 ಮತದಾರರಿದ್ದಾರೆ. ಆದರೆ, ವಿಧಾನ ಪರಿಷತ್ತಿನ ಚುನಾವಣೆ ನಡೆಯುವ ಮುಂಚೆ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಹಾಗೂ ಗ್ರಾ,ಪಂ.ಯಿಂದ ಮೇಲ್ದರ್ಜೆಗೆ ಏರಿಸಲಾಗಿರುವ ೧೫ ಪಟ್ಟಣ ಪಂಚಾಯತಿಗಳಿಗೆ ಚುನಾವಣೆ ನಡೆಯಬೇಕಾಗಿದೆ.

 

ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವೀರಕುಮಾರ ಪಾಟೀಲ ಅಲ್ಪ ಮತಗಳ ಅಂತರದಿಂದ ಸೋತಿದ್ದರು. ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಮತ್ತು ಪಕ್ಷೇತರರಾಗಿ ಸ್ಪರ್ಧಿಸಿದ್ದ ವಿವೇಕರಾವ ಪಾಟೀಲ ಗೆದ್ದಿದ್ದರು. ಒಂದೇ ಪಕ್ಷಕ್ಕೆ ಎರಡೂ ಸ್ಥಾನಗಳನ್ನು ಗೆಲ್ಲುವಷ್ಟು ಮತಗಳು ದೊರೆಯುವುದು ಕಷ್ಟಸಾಧ್ಯವಿರುವ ಕಾರಣ ಬಿಜೆಪಿ ಮತ್ತು ಕಾಂಗ್ರೆಸ್ ಒಂದೊಂದು ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸುತ್ತವೆ. ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಮಿಕ್ಕಿ ಉಳಿದ ಎರಡನೇ ಪ್ರಾಶಸ್ತ್ಯದ ಮತಗಳನ್ನು ಪಕ್ಷೇತರ ಅಭ್ಯರ್ಥಿಯೊಬ್ಬರಿಗೆ ಹಾಕಲು ಒಳಒಪ್ಪಂದ ಮಾಡಿಕೊಳ್ಳಲಾಗಿರುತ್ತದೆ.

 

ಎರಡೂ ಪಕ್ಷಗಳ ಒಳಒಪ್ಪಂದದ ಕಾರಣಕ್ಕೆ ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ವಿವೇಕರಾವ ಪಾಟೀಲ ಗೆದ್ದಿದ್ದರು ಅಲ್ಲದೆ ಇನ್ನೊಬ್ಬ ಪಕ್ಷೇತರ ಅಭ್ಯರ್ಥಿ ವಿ.ಎಸ್.ಸಾಧುನವರ ಕೂಡ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಳನ್ನು ಸೆಳೆಯಲು ಯಶಸ್ವಿಯಾಗಿದ್ದರು. ಹೀಗಾಗಿ ಈ ಬಾರಿಯೂ ಪಕ್ಷೇತರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ. ಲಖನ್ ಜಾರಕಿಹೊಳಿ ಕೂಡ ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ಕೇಳಿ ಬರುತ್ತಿದ್ದರೂ, ಈ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

 

ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಪ್ರಕಾಶ ಹುಕ್ಕೇರಿ, ವೀರಕುಮಾರ ಪಾಟೀಲ ಮತ್ತು ಚನ್ನರಾಜ ಹಟ್ಟಿಹೊಳಿ ತಮ್ಮದೇ ರೀತಿಯ ಪ್ರಯತ್ನ ನಡೆಸಿದ್ದಾರೆ. ಯುವ ಮುಖಂಡ ಚನ್ನರಾಜ ಹಟ್ಟಿಹೊಳಿ ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮತ್ತು ಉಪಚುನಾವಣೆ ಸಂದರ್ಭದಲ್ಲಿಯೂ ಟಿಕೆಟ್ ಕೇಳಿದ್ದರು. ಆದರೆ ಕೊನೆ ಘಳಿಗೆಯಲ್ಲಿ ಟಿಕೆಟ್ ಬೇರೆ ಮುಖಂಡರ ಪಾಲಾಗಿತ್ತು. ಹೀಗಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಸ ದೊರೆಯುವ ವಿಶ್ವಾಸದಲ್ಲಿ ಚನ್ನರಾಜ ಹಟ್ಟಿಹೊಳಿ ಇದ್ದಾರೆ. ಕೆಲವು ಆಕಾಂಕ್ಷಿಗಳು ಈಗಾಗಲೆ ಒಳಗೊಳಗೆ ಸಿದ್ಧತೆಯನ್ನೂ ನಡೆಸುತ್ತಿದ್ದಾರೆ.