ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ‌ಚಳಿಗಾಲ ಅಧಿವೇಶನ ನಡೆಯುವುದು ಖಚಿತ; ಕಲಾಪದ ನೇರ ಪ್ರಸಾರಕ್ಕೆ ವ್ಯವಸ್ಥೆ - ಬಸವರಾಜ ಹೊರಟ್ಟಿ

ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ‌ಚಳಿಗಾಲ ಅಧಿವೇಶನ ನಡೆಯುವುದು ಖಚಿತ; ಕಲಾಪದ ನೇರ ಪ್ರಸಾರಕ್ಕೆ ವ್ಯವಸ್ಥೆ - ಬಸವರಾಜ ಹೊರಟ್ಟಿ

ಬೆಳಗಾವಿ: ವಿಧಾನಮಂಡಳದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವುದು ಖಚಿತವಾಗಿದ್ದು, ಈ ಬಾರಿಯ  ವಿಧಾನಮಂಡಳದ ಕಲಾಪಗಳ ನೇರಪ್ರಸಾರದ ವ್ಯವಸ್ಥೆ ಮಾಡಲಾಗುತ್ತಿದೆ. 

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಂದು ಸುವರ್ಣ ವಿಧಾನಸೌಧದಲ್ಲಿ ಸಿದ್ಧತೆಗಳ ಪರಿಶೀಲನೆ ನಡಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು ಇಲ್ಲಿವೆ- 


* ಇ-ಗವರ್ನನ್ಸ್, ಲೋಕೋಪಯೋಗಿ, ವಾರ್ತಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ, ಸೂಕ್ತ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

* ಈ ಬಾರಿ ಅಧಿವೇಶನದ ಕಲಾಪವನ್ನು ನೇರಪ್ರಸಾರ ಮಾಡಲು ನಿರ್ಧರಿಸಲಾಗಿದೆ.

* ನ.20 ರೊಳಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

* ಅಧಿವೇಶನ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡಿಸೆಂಬರ್ ಮಾಹೆಯಲ್ಲಿ ಅಧಿವೇಶನ ನಡೆಯುವುದು ಖಚಿತವಾಗಿದೆ. ದಿನಾಂಕವನ್ನು ಸರಕಾರ ನಿರ್ಧರಿಸಲಿದೆ.

* ಶಾಸಕರ ಭವನ ನಿರ್ಮಾಣ ಬಹುಜನರ ಬೇಡಿಕೆಯಾಗಿದೆ. ಇದನ್ನು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸರಕಾರದ ಗಮನಕ್ಕೆ ತರಲಾಗುವುದು.

* ಶಾಸಕರ ಭವನದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಧಕ-ಬಾಧಕಗಳನ್ನು ಚರ್ಚಿಸಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.

* ಸುವರ್ಣ ವಿಧಾನಸೌಧವನ್ನು ನಿರ್ಮಿಸಿ ಪ್ರತಿವರ್ಷ ಅಧಿವೇಶನ ನಡೆಸುವುದರಿಂದ ಶಾಸಕರ ಭವನ ನಿರ್ಮಿಸುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ.

* ಅಧಿವೇಶನ ನಡೆಸುವಾಗ ಕಚೇರಿಗಳ ಕೆಲಸಕಾರ್ಯಗಳು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರಿಶೀಲಿಸಲಾಗುತ್ತಿದೆ.

* ಸುವರ್ಣ ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

* ಅಧಿವೇಶನದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಜಿಸಲಾಗುವುದು.

* ಶಾಸಕರ ಹಾಜರಾತಿ ಕಡ್ಡಾಯಗೊಳಿಸಲು ಅವಕಾಶಗಳಿರುವುದಿಲ್ಲ. ಆದರೆ ಬೆಳಗಾವಿ ಅಧಿವೇಶನದ ಕಲಾಪಗಳಲ್ಲಿ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

* ಪ್ರಶ್ನೋತ್ತರ, ಶೂನ್ಯ ವೇಳೆ, ಗಮನಸೆಳೆಯುವ ಸೂಚನೆ ಸೇರಿದಂತೆ ತುರ್ತು ವಿಷಯಗಳ ಚರ್ಚೆಗೆ ನಿಯಮಾವಳಿ ಪ್ರಕಾರ ಅವಕಾಶವನ್ನು ಕಲ್ಪಿಸಲಾಗುವುದು. ಆಯಾ ದಿನದ ವಿಷಯಸೂಚಿಯ ಪ್ರಕಾರ ಕಲಾಪವನ್ನು ನಡೆಸಲಾಗುವುದು.

* ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಆದ್ಯತೆ ನೀಡಲಾಗುವುದು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ವಿಧಾನಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.