ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಸೇರಿದಂತೆ ಎಲ್ಲ ಸೇವೆಗಳು ಆರಂಭ

ಬೆಳಗಾವಿ: ಇದುವರೆಗೆ ಕೋವಿಡ್-19 ನಿಗದಿತ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19 ಸೇರಿದಂತೆ ಮೊದಲಿನಂತೆ ಓಪಿಡಿ ಹಾಗೂ ಇತರೆ ಎಲ್ಲ ಆರೋಗ್ಯ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ವೇಳೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲಾ ಆಸ್ಪತ್ರೆಯನ್ನು  ಕೋವಿಡ್ ಆಸ್ಪತ್ರೆಯಾಗಿ ಘೋಷಿಸಲಾಗಿತ್ತು.

ಇದೀಗ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಗಣನೀಯ ಇಳಿಮುಖವಾಗಿರುವುದರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗ(ಓಪಿಡಿ) ಸೇರಿದಂತೆ ಎಲ್ಲ ಬಗೆಯ ವೈದ್ಯಕೀಯ ಸೇವೆಗಳನ್ನು ಮಂಗಳವಾರ(ನ.17) ದಿಂದ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಆಸ್ಪತ್ರೆಯ ಒಂದು ವಿಭಾಗವನ್ನು ಕೋವಿಡ್-19 ಚಿಕಿತ್ಸೆಗೆ ಮೀಸಲಿಟ್ಟು, ಉಳಿದ ವಿಭಾಗಗಳಲ್ಲಿ ಮೊದಲಿನಂತೆ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ. ಸಾರ್ವಜನಿಕರು ಆಸ್ಪತ್ರೆಯ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page